ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

ಮುಂಬೈ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಶಾಂತಿಯುತ ಹೋರಾಟವನ್ನು ಶ್ಲಾಘಿಸಿರುವ ಅವರು, ಈ ಹೋರಾಟಕ್ಕೆ ಯಾವುದೇ ರಾಜಕೀಯ ಬಣ್ಣ ಬಳಿಯಬಾರದು ಎಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಲ್ಮಾನ್ ಖಾನ್, ಆರಂಭದಲ್ಲಿ ಶಾಂತಿಯುತವಾಗಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿರುವುದು ಬೇಸರ ತಂದಿದೆ. ಈ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳೊಂದಿಗೆ ತಮ್ಮ ಸಹಾನುಭೂತಿ ಇದೆ ಎಂದು ಹೇಳಿದ್ದಾರೆ.

Oplus_16908288

ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ದೇಶದ ವಿದ್ಯಾರ್ಥಿಗಳು ಒಂದಾಗಿ ಹೋರಾಡುತ್ತಿರುವುದು ಸಂತಸದ ಸಂಗತಿ. ಕಷ್ಟಪಟ್ಟು ಓದಿ ಉತ್ತಮ ಭವಿಷ್ಯ ರೂಪಿಸಬೇಕೆಂಬ ವಿದ್ಯಾರ್ಥಿಗಳ ಸಮರ್ಪಣೆ ಹಾಗೂ ಪ್ರಾಮಾಣಿಕತೆ ಶ್ಲಾಘನೀಯ ಎಂದು ಅವರು ಹೇಳಿದ್ದಾರೆ.

ಇದು ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ವಿಚಾರವಾಗಿದ್ದು, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಈ ಹೋರಾಟದ ಸಂಪೂರ್ಣ ಗೌರವ ವಿದ್ಯಾರ್ಥಿಗಳಿಗೇ ಸಲ್ಲಬೇಕು. ಸರ್ಕಾರವೂ ವಿದ್ಯಾರ್ಥಿಗಳಿಗೆ ಸಂಪೂರ್ಣ ಬೆಂಬಲ ನೀಡಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂಬ ವಿಶ್ವಾಸವಿದೆ ಎಂದು ಸಲ್ಮಾನ್ ಖಾನ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಭಾರತ ಜಾಗತಿಕ ಶಿಕ್ಷಣದ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಬೇಕು. ವಿದೇಶಗಳಿಂದಲೂ ವಿದ್ಯಾರ್ಥಿಗಳು ಭಾರತಕ್ಕೆ ಬಂದು ಶಿಕ್ಷಣ ಪಡೆಯುವಂತ ವಾತಾವರಣ ನಿರ್ಮಾಣವಾಗಲಿ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.