‘ಸ್ವಚ್ಛತೆಯೇ ಸೇವೆ 2026’ ಅಭಿಯಾನ ಯಶಸ್ವಿಗೊಳಿಸಲು ಸಚಿವ ಯತೀಂದ್ರ ಕರೆ

ಬೆಂಗಳೂರು: ರಾಜ್ಯಾದ್ಯಂತ ‘ಸ್ವಚ್ಛತೆಯೇ ಸೇವೆ 2026’ ಅಭಿಯಾನದ ಅನುಷ್ಠಾನ ಮತ್ತು ಮೇಲ್ವಿಚಾರಣೆ ಕುರಿತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಂಗಳವಾರ ಗೃಹ ಕಚೇರಿಯಲ್ಲಿ ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದರು.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕರು, ಯುವಜನರು ಹಾಗೂ ವಿದ್ಯಾರ್ಥಿಗಳ ಸಕ್ರಿಯ ಸಹಭಾಗಿತ್ವದೊಂದಿಗೆ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಹಾಗೂ ಸಫಾಯಿ ಮಿತ್ರರ ಸುರಕ್ಷತೆ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವ ಮೂಲಕ ಸ್ವಚ್ಛ, ಸುಂದರ ಮತ್ತು ಆರೋಗ್ಯಕರ ನಗರಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

2025ರ ‘ಸ್ವಚ್ಛತೆಯೇ ಸೇವೆ’ ಅಭಿಯಾನದಲ್ಲಿ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಸಾರ್ವಜನಿಕರ ಸಹಕಾರ ಮತ್ತು ಅಧಿಕಾರಿಗಳ ನಿರಂತರ ಪರಿಶ್ರಮದೊಂದಿಗೆ 2026ರಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ‘ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2)’ರ ಒಂಬತ್ತನೇ ರಾಜ್ಯಮಟ್ಟದ ಸಮಿತಿ ಸಭೆಯನ್ನೂ ನಡೆಸಲಾಯಿತು. ಬೀದರ್ ಮತ್ತು ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಿರುವ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆ ಕುರಿತು ವಿಸ್ತೃತವಾಗಿ ಚರ್ಚಿಸಿ, ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.

ನಗರ ಪ್ರದೇಶಗಳ ಜನರಿಗೆ ಅನುಕೂಲವಾಗುವಂತೆ ಗುಣಮಟ್ಟದ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪಿ.ಎನ್. ರವೀಂದ್ರ, ಮುಖ್ಯ ಅಭಿಯಂತರ ಪುರುಷೋತ್ತಮ ದಾಸ್ ಹೆಗ್ಗಡೆ, ನಗರಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕಿ ಮಾಧುರಿ ತವಾಗ್, ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕಿ ತುಷಾರ್ ಮಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.