ಬೀದರ್ : ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹಾಗೂ ಕುಟುಂಬದ ಸದಸ್ಯರಿಗೆ 10 ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಭಾಲ್ಕಿ ತಾಲೂಕು ಕಟ್ಟಿತೂಗಾಂವದಲ್ಲಿರುವ ಸಚಿನ್ ಪಾಂಚಾಳ ನಿವಾಸಕ್ಕಿಂದು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರ ಹಾಗೂ ಖಾಸಗಿ ನೆರವಿನಿಂದ ಒಟ್ಟು 10 ಲಕ್ಷ ಪರಿಹಾರ ಕೊಡಿಸುವ ಘೋಷಣೆ ಮಾಡಿದರು. ಈ ನೋವಿನ ಸಂದರ್ಭದಲ್ಲಿ ತಾವೂ ಹಾಗೂ ಸರ್ಕಾರ, ಸಚಿನ್ ಕುಟುಂಬದ ಜೊತೆ ನಿಲ್ಲುವುದಾಗಿ ತಿಳಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಈಶ್ವರ ಖಂಡ್ರೆ ಹೇಳಿದರು.




