ಶಿವಮೊಗ್ಗ: ಕಳೆದ ಕೆಲವು ದಿನಗಳ ಹಿಂದೆ ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ನಡೆದ ಅತ್ಯಂತ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟ ಬಾಲಕ ಸಂಕೇತ್ ಕುಟುಂಬಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಆರ್ಥಿಕ ನೆರವು ಹಸ್ತಾಂತರಿಸಿದೆ.
ಇಂದು ಜಿಲ್ಲೆಗೆ ಭೇಟಿ ನೀಡಿದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮೃತ ಬಾಲಕನ ಪೋಷಕರನ್ನು ಭೇಟಿ ಮಾಡಿ ವೈಯಕ್ತಿಕವಾಗಿ ಸಾಂತ್ವನ ನೀಡಿದರು.
ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ 5 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 15 ಲಕ್ಷ ರೂಪಾಯಿಗಳ ಚೆಕ್ ಅನ್ನು ಪೋಷಕರಿಗೆ ನೀಡಲಾಯಿತು.
ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಬಾಲಕ ಸಂಕೇತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದನು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯನ್ನು ಕಳೆದುಕೊಂಡಿರುವುದು ನೋವಿನ ಸಂಗತಿ. ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಿದ್ದೇವೆ. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.




