ಉಡುಪಿ: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಯ್ಯಾಡಿಯಲ್ಲಿ ಅಕ್ರಮವಾಗಿ ಕಾರಿನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯ ಬಳಿಕ ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆ, ಗೋವುಗಳ ಕಳ್ಳತನ ಮತ್ತು ಅಕ್ರಮ ಸಾಗಾಟ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಮತ್ತು ದಲ್ಲಾಳಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಹಿಂದೂ ಜಾಗರಣ ವೇದಿಕೆಯ ಬೈಂದೂರು ತಾಲೂಕು ಘಟಕದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಾಲೂಕು ಸಂಯೋಜಕ ಹರೀಶ್ ಸಲ್ಕೋಡ್ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ರಾಜೇಶ್ ಆಚಾರ್ಯ ಬೈಂದೂರು, ಬಾಬು ಮಯ್ಯಾಡಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.



