ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಸೋಮವಾರ ‘ಅಕ್ವಾನ್’ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದ್ದು, ಮಂಗಳವಾರದ ವೇಳೆಗೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ನಿರೀಕ್ಷೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ವಾಯವ್ಯ ದಿಕ್ಕಿನಲ್ಲಿ ಚಲಿಸಿ ಆಂಧ್ರಪ್ರದೇಶ ಕರಾವಳಿಯತ್ತ ಸಾಗುವ ಸಾಧ್ಯತೆಯಿದೆ.
ಇದರ ಪರಿಣಾಮವಾಗಿ ಉತ್ತರ ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಂಗಳವಾರದಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಚೆನ್ನೈ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ನವೆಂಬರ್ 18 ಮತ್ತು 19ರಂದು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕಾಂಚೀಪುರಂ, ರಾಣಿಪೇಟೆ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮಯಿಲಾಡುತುರೈ ಜಿಲ್ಲೆಗಳು ಹಾಗೂ ಪುದುಚೇರಿಯಲ್ಲಿ ಬುಧವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ತಮಿಳುನಾಡು ಕರಾವಳಿ, ನೈಋತ್ಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.



