ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ: ಕೆಇಎಯಿಂದ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (CAR/DAR) ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ 2026ರ ಸೆಪ್ಟೆಂಬರ್ 6ರಂದು ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯ ಪ್ರಾಥಮಿಕ ಕೀ ಉತ್ತರಗಳನ್ನು ಸೆಪ್ಟೆಂಬರ್ 7ರಂದು ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಮೂಲಕ ಪರಿಶೀಲಿಸಿ, ಸೆಪ್ಟೆಂಬರ್ 10ರಂದು ಅಂತಿಮ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು.

ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 14 ಕೊನೆಯ ದಿನ

ಪರಿಷ್ಕೃತ ಕೀ ಉತ್ತರಗಳ ಅನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (https://cetonline.karnataka.gov.in/kea/) ವೀಕ್ಷಿಸಬಹುದಾಗಿದೆ. ಪ್ರಕಟಿತ ತಾತ್ಕಾಲಿಕ ಫಲಿತಾಂಶಕ್ಕೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಸೂಕ್ತ ಪೂರಕ ದಾಖಲೆಗಳೊಂದಿಗೆ ಅಧಿಕೃತ ಲಿಂಕ್ ಮೂಲಕ 2026ರ ಸೆಪ್ಟೆಂಬರ್ 14ರ ಸಂಜೆ 5:30ರ ಒಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಈ ಹಂತದಲ್ಲಿ ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.