ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ತಂಡದ ಚಾಂಪಿಯನ್ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 35 ಸಾವಿರ ಆಸನದ ವ್ಯವಸ್ಥೆ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿದೆ. ಆದರೇ ಆರ್ ಸಿ ಬಿ ತಂಡದ ಚಾಂಪಿಯನ್ ವಿಜಯೋತ್ಸವದ ಆಚರಣೆಗೆ 3 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಹೀಗಾಗಿ ಕಾಲ್ತುಳಿತ ದುರಂತ ಸಂಭವಿಸಿದೆ. ಇದಕ್ಕೆ ಸರ್ಕಾರ ದುಖಿಸುತ್ತದೆ. ಸಂತಾಪ ಸೂಚಿಸುತ್ತದೆ. ಮೃತರ ಕುಟುಂಬಕ್ಕೆ ದುಖ ಭರಿಸುವಂತ ಶಕ್ತಿ ನೀಡಲಿ ಎಂದರು.
ಮೃತರೆಲ್ಲರೂ ಯುವಕರು, ಯುವತಿಯರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದರು. ಅಲ್ಲದೇ 33 ಮಂದಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.
ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ನಡೆದಂತ ಕಾಲ್ತುಳಿತ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ. ತನಿಖೆಯ ನಂತ್ರ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು.




