ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಸರ್ವಾನುಮತದ ನಿರ್ಣಯ ಅಂಗೀಕಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಯಥಾವತ್ತಾಗಿ ಒಪ್ಪದಿರಲು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ಮಲೆನಾಡು ಮತ್ತು ಕರಾವಳಿ ಭಾಗದ ಜನರ ಜಮೀನು, ಜೀವನೋಪಾಯ ಹಾಗೂ ಕೃಷಿಕರ ಹಿತರಕ್ಷಣೆಗಾಗಿ ಈ ಅಧಿಸೂಚನೆಯನ್ನು ಮರು ಪರಿಶೀಲಿಸುವಂತೆ ಕೇಂದ್ರಕ್ಕೆ ಒತ್ತಾಯಿಸಲು ನಿರ್ಧರಿಸಲಾಗಿದೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಪ್ರಮುಖ ನಿರ್ಣಯವನ್ನು ಮಂಡಿಸಿದ್ದು, ಇದಕ್ಕೆ ವಿಪಕ್ಷಗಳು ಸೇರಿದಂತೆ ಸದನದ ಎಲ್ಲಾ ಸದಸ್ಯರು ಒಮ್ಮತದ ಬೆಂಬಲ ಸೂಚಿಸಿದರು.

ವರದಿಯ ಲೋಪ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ

ಕಸ್ತೂರಿ ರಂಗನ್ ವರದಿಯಲ್ಲಿ ಕಂಡುಬಂದಿರುವ ಹಲವು ಗಂಭೀರ ನ್ಯೂನ್ಯತೆಗಳು ಮತ್ತು ಸಾರ್ವಜನಿಕರ ಆತಂಕಗಳನ್ನು ಸರಿಪಡಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿಯು ವರದಿಯ ಎಲ್ಲಾ ಅಂಶಗಳು, ಕೃಷಿ ಭೂಮಿಯ ಗಡಿ ಗುರುತಿಸುವಿಕೆ ಹಾಗೂ ಪರಿಸರ ಸೂಕ್ಷ್ಮ ವಲಯದ ತಾಂತ್ರಿಕ ಲೋಪಗಳನ್ನು ಕೂಲಂಕುಷವಾಗಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ.

ಜನರ ಜೀವನೋಪಾಯವೇ ನಮಗೆ ಆದ್ಯತೆ: ಸಿಎಂ

ನಿರ್ಣಯ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕಸ್ತೂರಿ ರಂಗನ್ ವರದಿಯ ನಿಬಂಧನೆಗಳಿಂದ ರಾಜ್ಯದ 10 ಜಿಲ್ಲೆಗಳ ಸುಮಾರು 1,449ಕ್ಕೂ ಹೆಚ್ಚು ಗ್ರಾಮಗಳ ಜನರ ಜೀವನೋಪಾಯಕ್ಕೆ ಧಕ್ಕೆಯಾಗುವ ಭೀತಿಯಿದೆ. ಕೃಷಿ ಭೂಮಿ, ಜನವಸತಿ ಪ್ರದೇಶಗಳು ಮತ್ತು ಖಾಸಗಿ ತೋಟಗಳನ್ನು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಸೇರಿಸಿರುವುದು ಅಶಾಂತಿಗೆ ಕಾರಣವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ನೀಡಿರುವ 7ನೇ ಕರಡು ಅಧಿಸೂಚನೆಯನ್ನು ನಾವು ಯಥಾವತ್ತಾಗಿ ಒಪ್ಪಲು ಸಾಧ್ಯವಿಲ್ಲ” ಎಂದರು.

ಕೇಂದ್ರಕ್ಕೆ ಪರ್ಯಾಯ ಪ್ರಸ್ತಾವನೆ ಸಲ್ಲಿಕೆ

ಕೇಂದ್ರ ಸರ್ಕಾರವು ಸೆಪ್ಟೆಂಬರ್ 27ರೊಳಗೆ ರಾಜ್ಯದ ಅಂತಿಮ ನಿಲುವನ್ನು ತಿಳಿಸುವಂತೆ ಕೇಳಿದ್ದು, ಈ ಹಿನ್ನೆಲೆಯಲ್ಲಿ ಶಾಸನಸಭೆಯ ಸರ್ವಾನುಮತದ ನಿರ್ಣಯವನ್ನು ಕೇಂದ್ರ ಗೃಹ ಹಾಗೂ ಪರಿಸರ ಸಚಿವಾಲಯಕ್ಕೆ ಕಳುಹಿಸಿಕೊಡಲಾಗುವುದು. ಅಗತ್ಯಬಿದ್ದರೆ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ದು ಮನವಿ ಸಲ್ಲಿಸಲು ಮತ್ತು ನಿವೃತ್ತ ನ್ಯಾಯಾಧೀಶರ ಸಮಿತಿಯ ವರದಿ ಆಧಾರದ ಮೇಲೆ ಕೇಂದ್ರಕ್ಕೆ ಸೂಕ್ತ ಪರ್ಯಾಯ ಪ್ರಸ್ತಾವನೆ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ.