ಚಳ್ಳಕೆರೆ: ಚಿರತೆ ಸೆರೆಗೆ ತ್ವರಿತ ಕಾರ್ಯಾಚರಣೆ, ಕುಟುಂಬಕ್ಕೆ ಪರಿಹಾರ ಬಿಡುಗಡೆಗೆ ಅಧಿಕಾರಿಗಳಿಗೆ ಸಚಿವರ ಸೂಚನೆ

ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ದೊಡ್ಡಚೆಲ್ಲೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಚಂದ್ರಪ್ಪ ಅವರ ನಿವಾಸಕ್ಕೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ತೆರಳಿದ ಸಚಿವರು, ಚಂದ್ರಪ್ಪ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಗೌರವ ಸಲ್ಲಿಸಿದರು. ದುಃಖತಪ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.

ಗ್ರಾಮದಲ್ಲಿ ಚಿರತೆ ದಾಳಿಯಿಂದ ಭಯದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಕಾರ್ಯಾಚರಣೆ ಆರಂಭಿಸಿ ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಚಂದ್ರಪ್ಪ ಅವರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಹಾಗೂ ಅಗತ್ಯ ಆರ್ಥಿಕ ನೆರವನ್ನು ಯಾವುದೇ ವಿಳಂಬವಿಲ್ಲದೆ ಬಿಡುಗಡೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರ ಜೀವ ಮತ್ತು ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಟಿ. ರಘುಮೂರ್ತಿ ತಿಳಿಸಿದರು.