ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಇಂದು ರಾಜ್ಯ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳು ಆರ್ಥಿಕವಾಗಿ ಮುನ್ನಡೆಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಹಾಗೂ ಹಮ್ಮಿಕೊಳ್ಳಲಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಪ್ರಯಾಣಿಕ ಬಸ್ ದರಗಳನ್ನು ಶೇಕಡ 33ರಷ್ಟು ಹೆಚ್ಚಿಸಲು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಶೇಕಡ 42ರಷ್ಟು ಹೆಚ್ಚಿಸಲು ಅನುಮೋದನೆ ದೊರಕಿಸಿಕೊಡುವಂತೆ ಕೋರಿರುತ್ತಾರೆ ಎಂದಿದೆ.
ಈ ಹಿನ್ನೆಲೆಯಲ್ಲಿ, ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿರುವುದಾಗಿ ತಿಳಿಸಿದೆ.




