ಬೆಂಗಳೂರು, ನ.15: ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಶೇಷ ಫುಡ್ ಕಿಯೋಸ್ಕ್ ಯೋಜನೆ ಜಾರಿಗೆ ತರಲು ಮುಂದಾಗಿದೆ. ಫಾಸ್ಟ್ಫುಡ್ ಟ್ರಕ್ ಟ್ರೈಲರ್, ಮೊಬೈಲ್ ಕಿಚನ್ ಹಾಗೂ ಫುಡ್ ಕಿಯೋಸ್ಕ್ ಆರಂಭಿಸಲು ಘಟಕ ವೆಚ್ಚದ ಶೇ.75ರಷ್ಟು ಅಥವಾ ಗರಿಷ್ಠ ₹4 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರ ಮುತುವರ್ಜಿಯಿಂದ ರೂಪುಗೊಂಡಿರುವ ಈ ಯೋಜನೆಗೆ ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಕಳೆದ ಬಜೆಟ್ನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಬಳಿಕ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಟಿ. ರಘುಮೂರ್ತಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಂಡಿದ್ದಾರೆ.

ಪರಿಶಿಷ್ಟ ಪಂಗಡಗಳ ಇಲಾಖೆಯ ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಹಾಗೂ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ ಮತ್ತು ನಿರ್ದೇಶಕ ಅಶೋಕ್ ಡಿ.ಆರ್. ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಆದಿವಾಸಿಗಳು ಸೇರಿದಂತೆ 50ಕ್ಕೂ ಹೆಚ್ಚು ಸಮುದಾಯಗಳು ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದು, ಈ ಯೋಜನೆ ಎಲ್ಲ ಸಮುದಾಯಗಳ ಅರ್ಹ ಫಲಾನುಭವಿಗಳಿಗೂ ಅನ್ವಯಿಸಲಿದೆ.
ಈ ಯೋಜನೆಯಿಂದ ಪರಿಶಿಷ್ಟ ಪಂಗಡದ ಸಮುದಾಯದವರ ಆರ್ಥಿಕ ಸಬಲೀಕರಣಕ್ಕೆ ನೆರವಾಗುವುದರ ಜತೆಗೆ ಗುಣಮಟ್ಟದ ಆಹಾರ ಒದಗಿಸುವ ಪ್ರಮಾಣೀಕೃತ ಮೊಬೈಲ್ ಘಟಕಗಳಿಗೆ ಉತ್ತೇಜನ ದೊರೆಯಲಿದೆ. ಸಾವಿರಾರು ಮಂದಿ ಸ್ವಯಂ ಉದ್ಯೋಗ ಆರಂಭಿಸಿ, ಇತರರಿಗೂ ಉದ್ಯೋಗ ಕಲ್ಪಿಸುವಂತಾಗಬೇಕು ಎಂಬುದು ಯೋಜನೆಯ ಉದ್ದೇಶವಾಗಿದೆ.



