ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬರ ತಾಲೂಕುಗಳ ಘೋಷಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮುದ್ದೇಬಿಹಾಳ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರು ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯವಾಗಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿರುವುದು, ಬರ ನಿರ್ವಹಣೆ ಹಾಗೂ ರೈತರ ನೆರವಿನ ವಿಚಾರದಲ್ಲಿ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ ಎಂದು ವಿಜಯೇಂದ್ರ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಟೀಕಿಸಿದ್ದಾರೆ.

‘190ಕ್ಕೂ ಹೆಚ್ಚು ಬರ ತಾಲೂಕುಗಳಿದ್ದರೂ 101 ಮಾತ್ರ ಘೋಷಣೆ’

ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಹೀಗಾಗಿ ಸರ್ಕಾರ ಎಲ್ಲ ವಿಚಾರಗಳಲ್ಲೂ ಪಾರದರ್ಶಕತೆಯನ್ನು ಗಾಳಿಗೆ ತೂರಿ, ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ರಾಜ್ಯದಲ್ಲಿ 190ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿದ್ದರೂ ಸರ್ಕಾರ ಕೇವಲ 101 ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ. ಈ ಬಗ್ಗೆ ಬಿಜೆಪಿ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಅವರು ಹೇಳಿದ್ದಾರೆ.

ಅಪ್ಪಾಜಿ ನಾಡಗೌಡ ಅವರ ಹೇಳಿಕೆ ಬಿಜೆಪಿ ಮಾಡಿರುವ ಆರೋಪಗಳಿಗೆ ಸಾಕ್ಷ್ಯ ಮತ್ತು ಪುರಾವೆ ಒದಗಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಆದರೆ ತಪ್ಪನ್ನು ಒಪ್ಪಿಕೊಂಡು ತಿದ್ದಿಕೊಳ್ಳುವ ಬದಲು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌, ಶಾಸಕ ನಾಡಗೌಡರ ಹೇಳಿಕೆಗೆ ಸ್ಪಷ್ಟೀಕರಣ ನೀಡುವ ನೆಪದಲ್ಲಿ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

‘ಮೊದಲು ಜನರ ಸಂಕಷ್ಟಕ್ಕೆ ಸ್ಪಂದಿಸಿ’

ಶಾಸಕ ನಾಡಗೌಡ ಹಾಗೂ ಸಚಿವ ಎಂ.ಬಿ. ಪಾಟೀಲ್‌ ಅವರ ಪರಸ್ಪರ ಹೇಳಿಕೆಗಳಿಂದ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಾಭಿಪ್ರಾಯಗಳು ಬಹಿರಂಗವಾಗಿವೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ನಿಮ್ಮೊಳಗಿನ ಪ್ರತಿಷ್ಠೆ, ಕಚ್ಚಾಟ ಮತ್ತು ಮೇಲಾಟ ಏನೇ ಇರಲಿ, ಮೊದಲು ಬರ ನಿರ್ವಹಣೆ ಸೇರಿದಂತೆ ಜನರ ಸಂಕಷ್ಟಕ್ಕೆ ಸ್ಪಂದಿಸುವತ್ತ ಗಮನಹರಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಆಗ್ರಹಿಸಿದ್ದಾರೆ.